ರಾಜ್ಯಸುದ್ದಿ

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಗ್ರೀನ್​ ಸಿಗ್ನಲ್​ : ಬಿಡಿಎ ಮೇಲ್ಮನವಿ ಎತ್ತಿ ಹಿಡಿದ ಹೈಕೋರ್ಟ್

ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ 140ಕ್ಕೂ ಹೆಚ್ಚು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಪ್ರಕಟಿಸಿದೆ.
ಭೂ ಸ್ವಾಧೀನ ಅಧಿಸೂಚನೆಯನ್ನು ರದ್ದುಪಡಿಸಿ 2014ರ ಜುಲೈ 11ರಂದು ಏಕಸದಸ್ಯ ಪೀಠ ನೀಡಿದ್ದ ಆದೇಶ ರದ್ದುಪಡಿಸಬೇಕು ಮತ್ತು ಭೂ ಸ್ವಾಧೀನ ಅಧಿಸೂಚನೆ ಎತ್ತಿಹಿಡಿಯಬೇಕು ಎಂಬ ಬಿಡಿಎ ಕೋರಿಕೆಯನ್ನೂ ವಿಭಾಗೀಯ ಪೀಠ ಮಾನ್ಯ ಮಾಡಿದೆ.
ಅಧಿಸೂಚನೆಯಲ್ಲಿ ಸ್ವಾಧೀನಕ್ಕೆ ಗುರುತಿಸಲಾಗಿದ್ದ ಜಾಗದಲ್ಲಿ ನರ್ಸರಿ ಅಭಿವೃದ್ಧಿಯಾಗಿರುವುದು ಹಾಗೂ ಕಟ್ಟಡ ನಿರ್ಮಾಣವಾಗಿರುವುದೂ ಸೇರಿದಂತೆ ಇತರೆ ಕಾರಣಗಳಿಂದ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಬೇಕು ಎಂಬ ಬಗ್ಗೆ ಯಾರದಾದರೂ ಮನವಿ ಇದ್ದರೆ, ಅಂತಹ ಭೂ ಮಾಲೀಕರು ಮೂರು ತಿಂಗಳಲ್ಲಿ ಬಿಡಿಎಗೆ ಮನವಿ ಸಲ್ಲಿಸಬೇಕು. ಬಿಡಿಎ ಆ ಮನವಿಗಳನ್ನು ಕಾನೂನು ಪ್ರಕಾರ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಪೀಠ ಆದೇಶಿಸಿದೆ.
ಸರ್ಕಾರದಿಂದ ಪೂರ್ವಾನುಮತಿ ಪಡೆಯದೇ ಇರುವುದೂ ಸೇರಿದಂತೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ನಿಯಮಗಳ ಪಾಲನೆ ಮಾಡಿಲ್ಲ. ಭೂ ಸ್ವಾಧೀನದಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಹೀಗಾಗಿ, ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ನಡೆಸಿರುವ ಭೂ ಸ್ವಾಧೀನ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ ಎಂದು ಇದೇ ಹೈಕೋರ್ಟ್‌ನ ಏಕಸದಸ್ಯ ಪೀಠ ತೀರ್ಮಾನಿಸಿತ್ತು. ಭೂ ಸ್ವಾಧೀನಕ್ಕೆ ಹೊರಡಿಸಿದ್ದ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಿ 2014ರ ಜುಲೈ 11ರಂದು ಆದೇಶಿಸಿತ್ತು. ಇದೀಗ ಈ ತೀರ್ಪನ್ನು ರದ್ದುಪಡಿಸಿರುವ ವಿಭಾಗೀಯ ಪೀಠವು ಭೂ ಸ್ವಾಧೀನ ಅಧಿಸೂಚನೆಯನ್ನು ಪುರಸ್ಕರಿಸಿದೆ.

Comments (0)

Your email address will not be published. Required fields are marked *

Back to top button