ಬೆಂಗಳೂರು : ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ಕಾರ್ಖಾನೆಯ ಆಡಳಿತ ಮಂಡಲಿಯ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು, `ವಿಶ್ವೇಶ್ವರಯ್ಯನವರ ದಿವಾನಗಿರಿಯ ಕಾಲದಲ್ಲಿ ಆರಂಭವಾದ ಬಣ್ಣ ಮತ್ತು ಅರಗಿನ ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ 34-35 ಕೋಟಿ ರೂ. ವಹಿವಾಟು ನಡೆಸುತ್ತಿದೆ. ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದ್ದು, ಈ ವರ್ಷ ವಹಿವಾಟು 77 ಕೋಟಿ ರೂ. ತಲುಪಲಿದೆ. ಆದರೆ, ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಉದ್ದಿಮೆ ಹೀಗಿದ್ದರೆ ಸಾಲುವುದಿಲ್ಲ ಎಂದರು.
ಇದಕ್ಕಾಗಿ, ಬಣ್ಣಗಳ ಉದ್ಯಮದಲ್ಲಿ ಪಳಗಿರುವ ಪರಿಣತರೊಬ್ಬರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸಭೆಯಲ್ಲಿ ಅನುಮತಿ ನೀಡಲಾಗಿದೆ. ಈ ಮೂಲಕ `ಮೈಸೂರು ಪೇಂಟ್ಸ್’ ಅನ್ನು ಬ್ರ್ಯಾಂಡ್ ಆಗಿ ಬೆಳೆಸಿ, ಖಾಸಗಿ ಕಂಪನಿಗಳಿಗೆ ಸಡ್ಡು ಹೊಡೆಯಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಹೇಳಿದರು.