ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅವರೊಬ್ಬ ಪಕ್ಷದ ಹಿರಿಯ ನಾಯಕರಾಗಿದ್ದು, ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ನೋವಾಗುವುದು ಸಹಜ. ಈಶ್ವರಪ್ಪ ಸೇರಿದಂತೆ ಕರಡಿ ಸಂಗಣ್ಣ, ಡಿ.ವಿ.ಸದಾನಂದಗೌಡ ಸೇರಿದಂತೆ ಮತ್ತಿತರೊಂದಿಗೆ ಪಕ್ಷದ ವರಿಷ್ಠರು ಮಾತುಕತೆ ಮಾಡಿ ಸಮಾಧಾನಪಡಿಸಲಿದ್ದಾರೆ ಎಂದರು.
ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಹೊರಬರಬೇಕು ಎಂದು ಒತ್ತಾಯಿಸಿದರು.