ರಾಜಕೀಯರಾಜ್ಯಸುದ್ದಿ

ಭೀಮಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ

ಕಲಬುರ್ಗಿ: ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 TMC ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 TMC ನೀರು ಹರಿಸುವಂತೆ ಸಿಎಂ ಮಾರ್ಚ್ 7 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಸಿಎಂ ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ. ಈ ನಡುವೆ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೆಜಿಗೆ ನೀರು ತರುವ ಪ್ರಯತ್ನ ಕೂಡ ನಡೆದಿದೆ. ಈ ನಿಟ್ಟಿನಲ್ಲಿ ಕಲಬುರಗಿ ಆರ್ ಸಿ ಅವರು ಬೆಳಗಾವಿ ಆರ್ ಸಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button