ಮಂಗಳೂರು : ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನ ಹೊಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿದ್ದ ಇವರು, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿದ್ದರು.
ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.
ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದರು. ಸಾಹಿತ್ಯದ ಹೆಚ್ಚಿನ ಒಲವು ಹೊಂದಿದ್ದ ಇವರು ಕಥೆ ಕವನಗಳ ರಚನೆ ಜೊತೆಗೆ ಯಕ್ಷಗಾನ ಪ್ರಸಂಗವನ್ನು ಕೂಡಾ ರಚಿಸಿದ್ದರು.