ರಾಯಚೂರು: ಗ್ರಾಮ ಪಂಚಾಯತಿ ನೌಕರರಿಗೆ ಪ್ರತಿ ತಿಂಗಳು ವೇತನ ಪಾವತಿ, ಕಾರ್ಖಾನೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಕಾರ್ಖಾನೆಯ ಕಾರ್ಮಿಕರು, ಸಂಘದ ಪದಾಧಿಕಾರಿಗಳು ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಗರದ ಸಾರ್ವಜನಿಕ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ಸಂಸದರ ಕಚೇರಿಯಲ್ಲಿ ಮನವಿ ಸಲ್ಲಿಸಿ ಕಾರ್ಮಿಕರ ಕೆಲಸದ ಅವಧಿಯನ್ನು ವಾರಕ್ಕೆ 36 ಗಂಟೆಗಳು ಹಾಗೂ ದಿನದ ಪಾಳೆಯನ್ನು 6 ಗಂಟೆಗಳಿಗೆ ಮಿತಿಗೊಳಿಸಬೇಕು. ಉದ್ಯೋಗದ ಅವಕಾಶಗಳನ್ನು ಸೃಷ್ಠಿಸಲು ಗಮನ ನೀಡಬೇಕು. ನಮ್ಮ ಸಂವಿಧಾನದ ಪರಿಚ್ಚೇದ 39 (ಡಿ) ನಲ್ಲಿ ಪ್ರತಿಪಾದಿಸಿರುವ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಬೇಕು. ಕಡಿಮೆ ವೇತನ ನೀಡುತ್ತಾ ಗುತ್ತಿಗೆ, ಹೊರಗುತ್ತಿಗೆ ಹಾಗೂ ಹಂಗಾಮಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ನೀತಿಗಳು, ಕಾರ್ಮಿಕ ವಿರೋಧಿ ಕಾನೂನುಗಳಿಂದ ದುಡಿಯುವ ಜನರ ಮೇಲೆ ತೀವ್ರ ಸಮಸ್ಯೆ ಉಂಟಾಗಿದೆ. ಕಾರ್ಪೋರೇಟ್, ಬಂಡವಾಳ ಶಾಹಿಗಳ ಪರವಾದ ಆಡಳಿತವನ್ನು ನಡೆಸುತ್ತಿರುವ ಪರಿಣಾಮವಾಗಿ ಕೋಟ್ಯಂತರ ಕಾರ್ಮಿಕರ ಮತ್ತು ಜನರ ಬದುಕಿನ ಮೇಲೆ ದುಷ್ಪರಿಣಾಮ ಬೀರಿದೆ ಎಂದು ದೂರಿದರು.
ರೈಲ್ವೇ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಖಾಸಗೀಕರಣ ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು. ಗ್ರಾಮ ಪಂಚಾಯತ್ ನೌಕರರು, ಕಾರ್ಖಾನೆಗಳ ಕಾರ್ಮಿಕರು ಹಾಗೂ ಔಷಧ ಪ್ರತಿನಿಧಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.