ಬೆಂಗಳೂರು: ನಾಳೆಯಿಂದ (ಮಾರ್ಚ್ 25) ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ – 1 ಆರಂಭವಾಗಲಿದೆ. ಒಟ್ಟು 2750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಕೆಲವು ವಸ್ತುಗಳಿಗೆ ನಿಷೇಧವನ್ನು ಹೇರಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧ ಮಾಡಲಾಗಿದೆ. ಅಲ್ಲದೆ, ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.


