ಬೆಂಗಳೂರು : ಹಣ ಪಡೆದ ತಂದೆಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರಕ್ಕೆ ಮಾಡಲು ಅವಕಾಶ ಮಾಡಿಕೊಟ್ಟಿರುವ ಹೀನ ಕೃತ್ಯವೊಂದು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಶಾಲೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುವ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನ ಇಬ್ಬರು ಸ್ನೇಹಿತರು ಬಾಲಕಿಯ ಮಲತಂದೆಗೆ ಹಣ ನೀಡಿ, ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದರು ಎಂದು ತಿಳಿದುಬಂದಿದೆ. ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಿದ್ದ ಆರೋಪಿ ಸಾಗರ್ ಹಾಗೂ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುವ ಮತ್ತೊಬ್ಬ ಆರೋಪಿ ಇಬ್ಬರು ಬಾಲಕಿಯ ಮಲತಂದೆಯೊಂದಿಗೆ ಗೆಳೆತನ ಸೆಳೆಸಿದ್ದು, ಈತನಿಗೆ ಹಣ ನೀಡಿ ಬಾಲಕಿ ಮೇಲೆ ಏಪ್ರಿಲ್ ನಿಂದ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಮನೆಯೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದು, ಅಲ್ಲಿದ್ದ ಮಾಲೀಕರ ಬಳಿ ತನ್ನ ಅಳಲು ತೋಡಿಕೊಂಡಿದ್ದಾಳೆ. ಬಳಿಕ ಮಾಲೀಕರು ಎನ್‌ಜಿಒವೊಂದಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಎನ್‌ಜಿಒ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಲಕಿ ಚಲನವಲನಗಳ ಮೇಲೆ ಇರಿಸಿದ್ದರು. ಇದರಂತೆ ಆರೋಪಿಗಳು ಬಾಲಕಿಯ ಮೇಲೆ ದೌರ್ಜನ್ಯ ಎಸಗಲು ಮುಂದಾದಾಗ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.
ಗುರುವಾರ ಪ್ರಕರಣ ದಾಖಲಾಗಿದ್ದು, ಶನಿವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಐಪಿಸಿ ಸೆಕ್ಷನ್, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ, ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಬಾಂಗ್ಲಾ ವಲಸಿಗ ಮತ್ತು ಆತನ ಪತ್ನಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದರು. ಬೆಂಗಳೂರಿಗೆ ಉದ್ಯೋಗ ಅರಸಿ ಬರುವ ಪಶ್ಚಿಮ ಬಂಗಾಳದ ವಲಸಿಗರ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ಕಿರುಕುಳದ ಘಟನೆಗಳು ಹೆಚ್ಚುತ್ತಿವೆ. ಹೀಗಾಗಿ ಪೊಲೀಸರು ಜಾಗರೂಕತೆಯನ್ನು ಹೆಚ್ಚಿಸಬೇಕಾಗಿದೆ ಎಂದು ಕಾರ್ಯಕರ್ತರೊಬ್ಬರು ಹೇಳಿದ್ದಾರೆ.