ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!
Rain forecast for several parts of the state – Orange alert declared for three districts!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳು ಮುಂಗಾರು ಮಳೆ ಮತ್ತಷ್ಟು ಬಿರುಸು ಪಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಒಟ್ಟು 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ರಾಜ್ಯದ ಹಲವೆಡೆ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ವಾತಾವರಣ ಸಂಪೂರ್ಣ ಬದಲಾಗಿದೆ. ನಗರದಾದ್ಯಂತ ಜಿಟಿಜಿಟಿ ತುಂತುರು ಮಳೆಯಾಗುತ್ತಿದ್ದು, ಬೆಂಗಳೂರಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ.
ಮುಂಗಾರು ತೀವ್ರಗೊಳ್ಳಲಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಾಗೂ ತಗ್ಗು ಪ್ರದೇಶದ ಜನರಿಗೆ ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿವೆ. ಮಳೆಯಿಂದಾಗಿ ಕರಾವಳಿ ತೀರದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.




