ಬೆಂಗಳೂರು : ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್​​​ಆರ್ ರಮೇಶ್‌ ಖಾಸಗಿ ದೂರು ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ ಹುದ್ದೆಯೊಂದಕ್ಕೆ ನೇಮಕ ಮಾಡಲು ವ್ಯಕ್ತಿಯೊಬ್ಬರಿಂದ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಸಿದ್ದರಾಮಯ್ಯ ಅವರು ಈ ಹಿಂದಿನ 2013-18 ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಕಿಂಗ್ಸ್ ಕೋರ್ಟ್​​ನ ಎಲ್ ವಿವೇಕಾನಂದ ಎಂಬವರಿಂದ 1.30 ಕೋಟಿ ರೂಪಾಯಿ ಹಣ ಪಡೆದ ಆರೋಪ ಕೇಳಿಬಂದಿತ್ತು. ಹಣ ಪಡೆದು ವಿವೇಕಾನಂದ ಅವರನ್ನು 2014 ರಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಲಾಗಿತ್ತು ಎಂಬ ಆರೋಪ ವ್ಯಕ್ತವಾಗಿತ್ತು.

ವಿವೇಕಾನಂದ ಅವರನ್ನು 3 ವರ್ಷದ ಅವಧಿಗೆ ನೇಮಕಮಾಡಿ ಆದೇಶ ಹೊರಡಿಸಲಾಗಿತ್ತು. ಈ ಬಗ್ಗೆ ಲೋಕಾಯುಕ್ತಕ್ಕೂ ಎನ್‌ಆರ್ ರಮೇಶ್ ದೂರು ನೀಡಿದ್ದರು.ಪ್ರಕರಣದ ತನಿಖೆ ನಡೆದು ಸಿದ್ದರಾಮಯ್ಯ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಬಿ ರಿಫೊರ್ಟ್​ನಲ್ಲಿ ಹೇಳಲಾಗಿತ್ತು.

ಇದೀಗ ಪ್ರಕರಣಕ್ಕೆ ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.ಇದನ್ನೇ ವಿಪಕ್ಷಗಳು ಚುನಾವಣೆಯಲ್ಲಿ ಪ್ರಮುಖವಾದ ಅಂತಹ ಅಸ್ತ್ರವನ್ನಾಗಿ ಪ್ರಯೋಗಿಸಬಹುದು ಎಂದು ಹೇಳಲಾಗುತ್ತಿದೆ.

By admin

Leave a Reply

Your email address will not be published. Required fields are marked *

Verified by MonsterInsights