ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದೆ. ಪುತ್ರಿ ಚೈತನ್ಯಾ ಎಂ. ಬೀಳಗಿ ಅವರನ್ನು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ‘ಸಹಾಯಕ’ (Assistant) ಹುದ್ದೆಗೆ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಜನವರಿ 2ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ಅನ್ವಯ, ಚೈತನ್ಯಾ ಅವರನ್ನು ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯ ಮೇಲೆ ನೇಮಿಸಲಾಗಿದೆ. ಆದೇಶ ಪತ್ರ ತಲುಪಿದ 15 ದಿನಗಳ ಒಳಗಾಗಿ ಕೆಲಸಕ್ಕೆ ಹಾಜರಾಗುವಂತೆ ಸರ್ಕಾರ ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ಖನಿಜ ನಿಗಮದ (KSMCL) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರು 2025ರ ನವೆಂಬರ್ 25ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು.
ದಕ್ಷ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರ ನಿಧನದಿಂದ ನೊಂದಿದ್ದ ಕುಟುಂಬಕ್ಕೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.


