ಮೈಸೂರು: ಮಲೆ ಮಹದೇಶ್ವರ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಭಕ್ತನ ಮೇಲೆ ದಾಳಿ ನಡೆಸಿ, ಬಲಿ ಪಡೆದಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ತಡರಾತ್ರಿ ಸೆರೆಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಂಡ್ಯ ಮೂಲದ ಪ್ರವೀಣ್ ಎಂಬ ಯುವಕನ ಸಾವಿನ ನಂತರ ಎಚ್ಚೆತ್ತ ಅರಣ್ಯ ಇಲಾಖೆ, ಚಿರತೆ ಹಿಡಿಯಲು ಬೃಹತ್ ಕಾರ್ಯಾಚರಣೆ ನಡೆಸಿ. ಡ್ರೋನ್ ಕ್ಯಾಮೆರಾಗಳ ಮೂಲಕ ಚಿರತೆಯ ಚಲನವಲನದ ಮೇಲೆ ನಿರಂತರ ನಿಗಾ ಇರಿಸಲಾಗಿತ್ತು. ಚಿರತೆ ಪತ್ತೆಯಾಗುತ್ತಿದ್ದಂತೆ ಅರವಳಿಕೆ ಮದ್ದು ನೀಡಿ ಅದನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು. ಸೆರೆಸಿಕ್ಕ ಚಿರತೆಯು ಸುಮಾರು 2 ರಿಂದ 3 ವರ್ಷದ ಗಂಡು ಚಿರತೆ ಎಂದು ಗುರುತಿಸಲಾಗಿದೆ.
ಸೆರೆಯಾದಚಿರತೆಯನ್ನು ಮೈಸೂರಿನ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಅಲ್ಲಿ ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ಧಾರೆ..
ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಕುಟುಂಬಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ. ಚಿರತೆ ಸೆರೆಯಿಂದ ಬೆಟ್ಟಕ್ಕೆ ಬರುವ ಸಾವಿರಾರು ಭಕ್ತರಲ್ಲಿ ಹಾಗೂ ಸ್ಥಳೀಯ ಜನರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದೆ.


