ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಅದು ಈಗ ಮತ್ತೆ ಮುನ್ನೆಲೆಗೆ ಬಂದಿದೆ
ಅದಲ್ಲದೇ ಬಿಜೆಪಿ ನಾಯಕ ಪ್ರತಾಪ್ ಸಿಂಹ ಕೂಡ ಶೀಘ್ರದಲ್ಲೇ ಪ್ರದೀಪ್ ಈಶ್ವರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರು ಮಾತನಾಡಿರುವ ವಿಡಿಯೋ ತುಣುಕನ್ನು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ ಕೆ ಸುಧಾಕರ್ ಅವರು ಒಂದು ಮತದ ಮುನ್ನಡೆಯನ್ನು ಪಡೆದರು ಕೂಡ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದ್ದರು.
ಆದರೆ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ 20,941 ಮತಗಳ ಮುನ್ನಡೆಯನ್ನು ಡಾ ಕೆ ಸುಧಾಕರ್ ಸಾಧಿಸಿದ್ದಾರೆ. ಇದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಳಿಕ ಅತಿಹೆಚ್ಚು ಲೀಡ್ ಬಂದಿರೋದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ ಎಂಬುದನ್ನು ಗಮನಿಸಬೇಕು. ಇದರೊಂದಿಗೆ ಪ್ರದೀಪ್ ಈಶ್ವರ್ ಮುಂದೆ ಏನ್ಮಾಡ್ತಾರೆ ಎಂಬುದು ಭಾರೀ ಕುತೂಹಲ ಕೆರಳಿಸಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅವರ ಬೈಟ್ ತುಣುಕನ್ನು ಹಂಚಿಕೊಂಡು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದು, ಯಾವಾಗ ರಾಜೀನಾಮೆ ನೀಡ್ತೀರಾ ಎಂದು ಪ್ರಶ್ನಿಸುತ್ತಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com