ರಾಜ್ಯ

ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರುವರೆಗೆ ವಿಸ್ತರಣೆ!

Madagaon - Mangalore Vande Bharat train extension to Bangalore!

ಬೆಂಗಳೂರು : ಉತ್ತರ ಕನ್ನಡ ಹಾಗೂ ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅಧಿಕೃತ ಹಸಿರು ನಿಶಾನೆ ತೋರಿದೆ. ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ರಾಜಧಾನಿ ಬೆಂಗಳೂರುವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, “ಬೆಂಗಳೂರು ಮತ್ತು ಮಡಗಾಂವ್ ನಡುವೆ ಹೊಸದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಬೇಕು ಎಂದು ಮಾರ್ಚ್‌ 11 ರಂದು ನಾನು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದೆ. ನಮ್ಮ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುರ್ಡೇಶ್ವರ, ಗೋಕರ್ಣ ಹಾಗೂ ಕಾರವಾರ ಮಾರ್ಗವಾಗಿ ರಾಜಧಾನಿ ಬೆಂಗಳೂರಿನವರೆಗೆ ವಿಸ್ತರಿಸಿ ಆದೇಶಿಸಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದೆ ಈ ರೈಲು ಪರಿಷ್ಕೃತ ಸಮಯದೊಂದಿಗೆ ರೈಲು ಸಂಖ್ಯೆ 26655/26656 ಯಶವಂತಪುರ – ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿ ಸಂಚರಿಸಲಿದೆ. ಈ ನಿರ್ಧಾರದಿಂದ ಕರಾವಳಿ ಜಿಲ್ಲೆಗಳು, ಉತ್ತರ ಕನ್ನಡ ಭಾಗದ ಜನರಿಗೆ, ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಹಾಗೂ ಪ್ರವಾಸೋದ್ಯಮಕ್ಕೆ ಅಪಾರ ಅನುಕೂಲವಾಗಲಿದೆ. 

ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಮಸ್ತ ಕ್ಷೇತ್ರದ ಜನರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights