ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು “ದ್ವೇಷ ಭಾಷಣಕ್ಕೆ ಸಮಾನ” ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ತರಾಟೆಗೆ ತೆಗೆದುಕೊಂಡಿದೆ. ಡಿಎಂಕೆ ಪಕ್ಷವು ಕಳೆದ 100 ವರ್ಷಗಳಿಂದಲೂ ಹಿಂದೂ ಧರ್ಮದ ಮೇಲೆ ಸತತವಾಗಿ ದಾಳಿ ನಡೆಸುತ್ತಾ ಬಂದಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
2023ರಲ್ಲಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕರೋನಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಪೀಠವು, “ಸಚಿವರ ಹೇಳಿಕೆಗಳು ಸಮಾಜದಲ್ಲಿ ದ್ವೇಷ ಬಿತ್ತುವಂತಿವೆ. ಒಂದು ನಿರ್ದಿಷ್ಟ ಸಿದ್ಧಾಂತದ ಹಿನ್ನೆಲೆಯಿಂದ ಬಂದಿರುವ ಇವರು ಧರ್ಮದ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ” ಎಂದು ಕಿಡಿಕಾರಿದೆ.
ಇದೇ ವೇಳೆ, ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಉದಯನಿಧಿ ಅವರ ಮೂಲ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ ಎಂಬ ಆರೋಪದ ಮೇಲೆ ತಿರುಚಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ, ಈ ಪ್ರಕರಣವನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
ದ್ವೇಷ ಭಾಷಣವನ್ನು ಮೊದಲು ಆರಂಭಿಸುವವರು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಮತ್ತು ಅದಕ್ಕೆ ಪ್ರತಿಕ್ರಿಯಿಸುವವರ ಮೇಲೆ ಮಾತ್ರ ಕ್ರಮ ಕೈಗೊಳ್ಳುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ದ್ವೇಷ ಭಾಷಣದ ಮೂಲಕರ್ತೃಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದು ಕಾನೂನು ಜಾರಿಯಲ್ಲಿರುವ ಗಂಭೀರ ಲೋಪ ಎಂದು ಪೀಠವು ಕಳವಳ ವ್ಯಕ್ತಪಡಿಸಿದೆ. ಈ ತೀರ್ಪು ಇದೀಗ ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಉದಯನಿಧಿ ಸ್ಟಾಲಿನ್ ಅವರ ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ.


