ಬಳ್ಳಾರಿ: ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಸೈಯದ್ ನಾಸೀರ್ ಹುಸೇನ್ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿರುವ ಬೈಕ್ ರ್‍ಯಾಲಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ನಾಸಿರ್ ಹುಸೇನ್ ಅವರನ್ನು ಬೈಕ್ ರ್‍ಯಾಲಿ ಮೂಲಕ ಸ್ವಾಗತಿಸಲು ಬಳ್ಳಾರಿ ನಗರದ ಸಂಗಮ್ ವೃತ್ತದಲ್ಲಿ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಸಂಗಮ್ ವೃತ್ತಕ್ಕೆ ನಗರದ ಹಲವು ಕಡೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಗುಂಪು ಗುಂಪಾಗಿ ಬೈಕ್‌ಗಳಲ್ಲಿ ಆಗಮಿಸಿದರು.

ಗಡಿಗಿ ಚನ್ನಪ್ಪ ವೃತ್ತದ ಕಡೆಯಿಂದ ಬೈಕ್‌ಗಳಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಅವರನ್ನು ತಡೆಯಲು ಪ್ರಯತ್ನಿಸಿದರು. ಆಗ ಮಧ್ಯ ಪ್ರವೇಶಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕು ನುಗ್ಗಲು ಉಂಟಾಯಿತು. ಗೋ ಬ್ಯಾಕ್ ನಾಸಿರ್ ಹುಸೇನ್ ಎಂಬ ಘೋಷಣೆಗಳನ್ನು ಕೂಗಲಾಯಿತು. ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ದಿಕ್ಕಾರ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.


