ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ತಿಂಗಳು ನಾಲ್ವರು ಸಾವನ್ನಪ್ಪಿದ್ದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವರು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅಲ್ಲಿ ಮೃತಪಟ್ಟವರ ಸಂಖ್ಯೆ ಈಗ 5ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಬಳ್ಳಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಗುಣಮಟ್ಟವಲ್ಲದ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ನಿಂದ ಬಾಣಂತಿಯರು ಸಾವನ್ನಪ್ಪಿರಬಹುದು. ಸರ್ಕಾರ ಈಗಾಗಲೇ ಔಷಧ ನಿಯಂತ್ರಕರನ್ನು ಅಮಾನತು ಮಾಡಿದ್ದು, ಸಲ್ಯೂಷನ್ ಪೂರೈಕೆ ಮಾಡಿದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ನೀಡಿದ ಬಳಿಕ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಈಗಾಗಲೇ ಕೆಲ ಕ್ರಮ ತೆಗೆದುಕೊಳ್ಳಲಾಗಿದೆ. ವರದಿ ಆಧಾರದ ಮೇಲೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಬಾಣಂತಿಯರ ಸಾವಿನ ಬಗ್ಗೆ ಗಹನವಾದ ಚರ್ಚೆಯಾಗಿದೆ. ಇದೇ ವೇಳೆ ಸಿದ್ದರಾಮಯ್ಯ, ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.