Top Newsಜಿಲ್ಲೆರಾಜಕೀಯರಾಜ್ಯಸುದ್ದಿ

ಮೆಟ್ರೋ ಪ್ರತಿಭಟನೆ ಕಿಚ್ಚು ; ಸಂಸದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ!

ಬೆಂಗಳೂರು : ಮೆಟ್ರೋ ದರ ಏರಿಕೆ ಖಂಡಿಸಿ ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರು ಕೈಯಲ್ಲಿ ‘ಖಾಲಿ ಟ್ರಂಕ್’ ಹಿಡಿದುಕೊಂಡು ಬರುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎನ್ನುವ ರೀತಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದಾಗ, “ಸಂಸತ್ತು ಅಧಿವೇಶನ ನಡೆಯುತ್ತಿರುವಾಗ ನನ್ನನ್ನು ವಶಕ್ಕೆ ಪಡೆಯುವಂತಿಲ್ಲ, ಕಾನೂನು ತಿಳಿದು ವರ್ತಿಸಿ” ಎಂದು ವಾಗ್ವಾದ ನಡೆಸಿದರು. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು, ಟ್ರಂಕ್ ಮೇಲಿದ್ದ ಸರ್ಕಾರದ ವಿರುದ್ಧದ ಪೋಸ್ಟರ್‌ಗಳನ್ನು ತೆರವುಗೊಳಿಸಿದರು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಸಿ.ಕೆ. ರಾಮಮೂರ್ತಿ ಮಾತನಾಡಿ, ಮೆಟ್ರೋ ದರ ಏರಿಕೆಗೆ ಈಗ ನೀಡಿರುವುದು ಕೇವಲ ತಾತ್ಕಾಲಿಕ ತಡೆ ಮಾತ್ರ. ಸರ್ಕಾರವು ಈ ದರ ಏರಿಕೆ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಮತ್ತು ಸದ್ಯ ಇರುವ ದರವನ್ನೂ ಕಡಿಮೆ ಮಾಡಬೇಕು, ರಾಜ್ಯ ಸರ್ಕಾರವು ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 20ಕ್ಕೂ ಹೆಚ್ಚು ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ಹಾಗೂ ಬಿಎಂಆರ್‌ಸಿಎಲ್ ಭದ್ರತಾ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಪೊಲೀಸರ ನೋಟಿಸ್ ನಡುವೆಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. #BJPProtest

Comments (0)

Your email address will not be published. Required fields are marked *

Back to top button