ಬೆಂಗಳೂರು: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ..
ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ, ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು.

ನಾನು ಬಸವಣ್ಣನವರ ಅಭಿಮಾನಿ, ಅವರ ತತ್ವದಲ್ಲಿ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಆ ಕಾರಣಕ್ಕೆ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಅಂತ ನಮ್ಮ ಸರ್ಕಾರ ಘೋಷಣೆ ಮಾಡಿದೆ. ಆ ಮೂಲಕ ಇಡೀ ಸರ್ಕಾರ ಬಸವಣ್ಣರಿಗೆ ಗೌರವ ಸೂಚಿಸಿದೆ ಎಂದು ತಿಳಿಸಿದರು.

ಈ ಸಮಾಜದಲ್ಲಿ ಜಾತಿ ವ್ಯವಸ್ಥೆ, ಮೇಲುಕೀಳು ಇರೋವರೆಗೂ ಬಸವಣ್ಣನ ತತ್ವಗಳು ಅತ್ಯಂತ ಪ್ರಸ್ತುತ. ನಾವು ಮೂಲತಃ ಮಾನವರು, ಆಮೇಲೆ ಭಾರತೀಯರು. ನಾನು ಕಾನೂನು ವಿದ್ಯಾರ್ಥಿ ಆಗಿದ್ದಾಗಿನಿಂದ ಈವರೆಗೂ ಬಸವಣ್ಣನ ಅನುಯಾಯಿ. ಸಂವಿಧಾನದಲ್ಲಿ ಬಸವಣ್ಣ ವಿಚಾರಗಳನ್ನು ಅಳವಡಿಸಿದ್ದಾರೆ. ಬಸವ ವಿಚಾರಗಳು, ಸಂವಿಧಾನದ ವಿಚಾರಗಳು ಹೆಚ್ಚೂ ಕಡಿಮೆ ಒಂದೇ ಆಗಿವೆ ಎಂದು ಬಣ್ಣಿಸಿದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದ್ದೇವೆ.

ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ. ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಎಂದು ಹೇಳಿದ್ದಾರೆ.


