
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಸರಣಿ ಮೊಬೈಲ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಳ್ಳತನದ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ತನಿಖೆಯ ವೇಳೆ ಕಳ್ಳತನವು ಕೇವಲ ಕ್ರೀಡಾಂಗಣಕ್ಕೆ ಮಾತ್ರ ಸೀಮಿತವಾಗಿರದೆ, ಮೆಟ್ರೋ ನಿಲ್ದಾಣಗಳು, ಬಸ್ ನಿಲ್ದಾಣಗಳು ಮತ್ತು ರಸ್ತೆ ಬದಿಗಳಲ್ಲಿಯೂ ಜನಸಂದಣಿಯ ಲಾಭ ಪಡೆದು ಮೊಬೈಲ್ ದೋಚುತ್ತಿದ್ದುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಗಾಗಲೇ 12ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಅತ್ಯಂತ ಆಘಾತಕಾರಿ ವಿಷಯವೆಂದರೆ, ಬಂಧಿತ ಆರೋಪಿಯು ಕಳ್ಳತನದ ಕೃತ್ಯಗಳಿಗಾಗಿ ಅಪ್ರಾಪ್ತ ಬಾಲಕರನ್ನು ಬಳಸಿಕೊಳ್ಳುತ್ತಿದ್ದ ಎಂಬ ಅಂಶ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಈ ಬಾಲಕರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಮಾರ್ಚ್ 28ರಂದು ನಡೆದ ಪಂದ್ಯದ ವೇಳೆ ಪ್ಲಾನ್ ಮಾಡಿಯೇ ಈ ಕೃತ್ಯ ಎಸಗಲಾಗಿದ್ದು, ಕಳೆದುಹೋದ ಮೊಬೈಲ್‌ಗಳ ಪೈಕಿ 21 ಫೋನ್‌ಗಳನ್ನು ರಿಕವರಿ ಮಾಡಲಾಗಿದೆ.
ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ನಗರದ ವಿವಿಧೆಡೆ ಜನದಟ್ಟಣೆ ಹೆಚ್ಚಿರುವುದರಿಂದ ಸಾರ್ವಜನಿಕರು ತಮ್ಮ ಮೊಬೈಲ್, ಪರ್ಸ್ ಮತ್ತು ಇತರ ವೈಯಕ್ತಿಕ ವಸ್ತುಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಕ್ರೀಡಾಂಗಣದ ಸುತ್ತಮುತ್ತ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು, ಸಂಶಯಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ.




