ಮೈಸೂರು: ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಹಿಂಪಡೆಯಲು ತನಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದು, ಈ ಸಂಬಂಧ ಲೋಕಾಯುಕ್ತರಿಗೆ ದೂರು ದಾಖಲಿಸಿದ್ದಾರೆ.

ಹೌದು.. ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡು ಕೆಲವರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದು, ಈ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ದೂರು ಸಲ್ಲಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ‘ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಕೆಲವರು ಡಿ. 12ರಂದು ನನ್ನ ಮನೆಗೆ ಬಂದಿದ್ದರು. ಪಾರ್ವತಿ ಅವರ ಕೆಲಸಗಳನ್ನು ನಾವೇ ನೋಡಿಕೊಳ್ಳುತ್ತಿದ್ದೇವೆ. ಅವರು ಈ ಪ್ರಕರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಕೋರಿರುವ ಪ್ರಕರಣವನ್ನು ಹಿಂಪಡೆಯಿರಿ. ಬೇಕಿದ್ದರೆ ಲೋಕಾಯುಕ್ತ ತನಿಖೆ ಮುಂದುವರಿಯಲಿ ಎಂದು ಹೇಳಿದ್ದರು. ಆದರೆ ಇದಕ್ಕೆ ನಾನು ಒಪ್ಪಿರಲಿಲ್ಲ’ ಎಂದು ಹೇಳಿದ್ದಾರೆ.

ದೂರು ದಾಖಲು

ಇನ್ನು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ತಾವು, ‘ಈ ಸಂಬಂಧ ಮಂಗಳವಾರ ಬೆಂಗಳೂರಿನಲ್ಲಿ ಇ.ಡಿ. ಕಚೇರಿಗೆ ದೂರು ನೀಡಿದ್ದೇನೆ. ಇಂದು ಲೋಕಾಯುಕ್ತ ಎಸ್.ಪಿ. ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತಿದ್ದೇನೆ. ಆರೋಪಿಗಳು ನನ್ನ ಮನೆಗೆ ಬಂದ, ನನ್ನ ಮಗನ ಜೊತೆ ಮಾತನಾಡುತ್ತಿರುವ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಅವುಗಳನ್ನು ಸಾಕ್ಷ್ಯವನ್ನಾಗಿ ನೀಡಿದ್ದೇನೆ. ಮೊದಲು ನನಗೆ ಹಣದ ಆಮಿಷ ಒಡ್ಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಧಿಕಾರಿಗಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ನನ್ನ ಮೇಲೆ ಒತ್ತಡ ಹೇರುವ ತಂತ್ರ ಮಾಡುತ್ತಿದ್ದಾರೆ’ ಎಂದು ಕೃಷ್ಣ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

Verified by MonsterInsights