ಕ್ರೈಂ ಸ್ಟೋರಿ

ನಕ್ಸಲ್​ ಲೀಡರ್ಸ್​​ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಮಂಗಳೂರು: ನಕ್ಸಲ್ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಕ್ಸಲ್ ನಾಯಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಕೇರಳದ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಕರೆತಂದು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದು, ಮೂರು ಪ್ರಕರಣಗಳ ತನಿಖೆ ನಡೆಸಲಿದ್ದಾರೆ‌.

ಕೇರಳದ ಜೈಲಿನಲ್ಲಿದ್ದ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ಶೃಂಗೇರಿಯ ಬಿ. ಜಿ. ಕೃಷ್ಣಮೂರ್ತಿ(50), ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿ(36) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಕರೆ ತಂದರು.

2021ರ ನವೆಂಬರ್ 8ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಂಟೆಡ್​ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ. ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಬಂಧಿಸಿ ತ್ರಿಶೂರ್ ಜೈಲಿನಟ್ಟಿದ್ದರು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ. ಜಿ. ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣಗಳು, ಸಾವಿತ್ರಿ ವಿರುದ್ಧ 22 ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

2012-2013ರಲ್ಲಿ ನಡೆದ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್‌ಗೆ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಎರಡು ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button