
ಜಮ್ಮ& ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಆಪರೇಷನ್ ಅಖಾಲ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಸಿಬ್ಬಂದಿ ಶುಕ್ರವಾರ ಅಖಾಲ್ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ ಪಡೆಗಳು ಓರ್ವ ಉಗ್ರನನ್ನ ಹತ್ಯೆಗೈದಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ರಾತ್ರಿಯಿಡೀ ನಿರಂತರ ಮತ್ತು ತೀವ್ರವಾದ ಗುಂಡಿನ ಚಕಮಕಿ ಮುಂದುವರೆಯಿತು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಯೋಧರು ಪ್ರತಿದಾಳಿ ನಡೆಸಿದ್ದಾರೆ. ಇಲ್ಲಿಯವರೆಗೆ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಇನ್ನು ಆಪರೇಷನ್ ಅಖಾಲ್ ಸೇನಾ ಕಾರ್ಯಚರಣೆಯನ್ನು ಮುಂದುವರಿಸಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಇಂದು ಬೆಳಿಗ್ಗೆ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ.
ಈ ಕಾರ್ಯಾಚರಣೆಯು ಏಪ್ರಿಲ್ 22 ರಂದು ಪಹಲ್ಗಾಮ್ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದ ಆಪರೇಷನ್ ಮಹಾದೇವ್ ಅಡಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.
ಜುಲೈ 28 ರಂದು ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಮುಲ್ನಾರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಸುಲೈಮಾನ್ ಅಲಿಯಾಸ್ ಆಸಿಫ್ ಮತ್ತು ಇಬ್ಬರು ಸಹಾಯಕರನ್ನು ಹೊಡೆದುರುಳಿಸಿದ್ದವು.




