GBA ವಿರುದ್ಧ ರೊಚ್ಚಿಗೆದ್ದ ಬೀದಿಬದಿ ವ್ಯಾಪಾರಿಗಳು – ವಿವಿಧ ಬೇಡಿಕೆಗೆ ಆಗ್ರಹ!
Street vendors up in arms against GBA – demanding fulfillment of various demands!

ಬೆಂಗಳೂರು : ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಈ ಆಪರೇಷನ್ ವಿರುದ್ಧ ಬೀದಿಬದಿ ವ್ಯಾಪಾರಿಗಳು ರೊಚ್ಚಿಗೆದ್ದಿದ್ದಾರೆ. ಜಿಬಿಎ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನೂರಾರು ಬೀದಿಬದಿ ವ್ಯಾಪಾರಿಗಳು ತಮ್ಮ ವ್ಯಾಪಾರ, ವಹಿವಾಟು ಸಂಪೂರ್ಣ ಬಂದ್ ಮಾಡಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಪಾಲಿಕೆಗಳ ವ್ಯಾಪ್ತಿಯಲ್ಲಿ ಫುಟ್‌ಪಾತ್ ಅತಿಕ್ರಮಿಸಿ ಅಂಗಡಿಗಳನ್ನು ಇಟ್ಟುಕೊಂಡವರ ವಿರುದ್ಧ ಜಿಬಿಎ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಫುಟ್‌ಪಾತ್‌ಗಳನ್ನು ತೆರವುಗೊಳಿಸುವ ಮೂಲಕ ಪಾದಚಾರಿಗಳಿಗೆ ಜಾಗ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ದಿಢೀರ್ ಕಾರ್ಯಾಚರಣೆಯು ಬೀದಿಬದಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಫುಟ್‌ಪಾತ್ ತೆರವು ಖಂಡಿಸಿ ಫ್ರೀಡಂಪಾರ್ಕ್ನಲ್ಲಿಂದು ವ್ಯಾಪಾರಿಗಳು ಪ್ರತಿಭಟಿಸಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. “ಜಿಬಿಎ ಅಧಿಕಾರಿಗಳು ಸದ್ಯಕ್ಕೆ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಸಚಿವರಾದ ಕೃಷ್ಣಬೈರೇಗೌಡ ಅವರು ಸ್ವತಃ ಪ್ರತಿಭಟನಾ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ.” ಎಂದು ಎಚ್ಚರಿಕೆ ನೀಡಿದ್ದಾರೆ.
ಬೀದಿಬದಿ ವ್ಯಾಪಾರಿಗಳ ಪ್ರಮುಖ ಬೇಡಿಕೆಗಳೇನು?
- ಒಕ್ಕಲೆಬ್ಬಿಸಲಾದ ವ್ಯಾಪಾರಿಗಳಿಗೆ ತಕ್ಷಣವೇ ಅದೇ ಸ್ಥಳದಲ್ಲಿ ವ್ಯಾಪಾರ ಮುಂದುವರಿಸಲು ಅನುವು ಮಾಡಿಕೊಡಬೇಕು.
- ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ರಸ್ತೆ ಬದಿಯಲ್ಲಿ ತಾತ್ಕಾಲಿಕ ವ್ಯಾಪಾರಕ್ಕೆ ಅವಕಾಶ ನೀಡಬೇಕು.
- 2014ರ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಮತ್ತು ಸಮರ್ಪಕವಾಗಿ ಜಾರಿಗೆ ತರಬೇಕು.
- ವ್ಯಾಪಾರಿಗಳ ಸ್ಥಳಾಂತರದ ಕುರಿತು ಅಂತಿಮ ತೀರ್ಮಾನವನ್ನು ಪಟ್ಟಣ ವ್ಯಾಪಾರ ಸಮಿತಿಯೇ (ಟೌನ್ ವೆಂಡಿಂಗ್ ಕಮಿಟಿ – TVC) ತೆಗೆದುಕೊಳ್ಳಬೇಕು.
- ತೆರವು ಕಾರ್ಯಾಚರಣೆ ವೇಳೆ ಜಪ್ತಿ ಮಾಡಲಾದ ಎಲ್ಲಾ ವ್ಯಾಪಾರ ಸಾಮಗ್ರಿಗಳನ್ನು ತಕ್ಷಣವೇ ಹಿಂತಿರುಗಿಸಬೇಕು.
- ನಗರಾದ್ಯಂತ ಬಾಕಿ ಇರುವ ಎಲ್ಲಾ ವ್ಯಾಪಾರಿಗಳ ಸಮಗ್ರ ಸಮೀಕ್ಷೆ ನಡೆಸಿ, ಗುರುತಿನ ಚೀಟಿಗಳನ್ನು ವಿತರಿಸಬೇಕು.
- ಹೊಸದಾಗಿ ಸೇರ್ಪಡೆಯಾಗಿರುವ ನಾಗರಪಾಲಿಕೆ ವ್ಯಾಪ್ತಿಗಳಲ್ಲಿ ಟೌನ್ ವೆಂಡಿಂಗ್ ಸಮಿತಿಗಳನ್ನು ಸ್ಥಾಪಿಸಬೇಕು.
- ಸಮಿತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲದೆ ವ್ಯಾಪಾರಿಗಳ ನೈಜ ಪ್ರತಿನಿಧಿಗಳಿಗೆ ಅವಕಾಶ ನೀಡಬೇಕು.
- ನಗರಾದ್ಯಂತ ಪಾದಚಾರಿ ಮಾರ್ಗಗಳನ್ನು ಅಗಲಗೊಳಿಸಿ ಪಾದಚಾರಿಗಳಿಗೂ ಹಾಗೂ ವ್ಯಾಪಾರಿಗಳಿಗೂ ಸೂಕ್ತ ಜಾಗ ಕಲ್ಪಿಸಬೇಕು.
- ಫುಟ್‌ಪಾತ್ ಮೇಲಿರುವ ಅಕ್ರಮ ವಾಹನ ನಿಲುಗಡೆ, ಖಾಸಗಿ ತೋಟಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳನ್ನು ಮೊದಲು ತೆರವುಗೊಳಿಸಬೇಕು.
- ದೊಡ್ಡ ದೊಡ್ಡ ಅಂಗಡಿ ಮಾಲೀಕರು ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿರುವುದನ್ನು ನಿಲ್ಲಿಸಬೇಕು.
- ಸರ್ಕಾರ ಹಾಗೂ ಬಿಬಿಎಂಪಿ ಅಧಿಕಾರಿಗಳು ಕೂಡಲೇ ವ್ಯಾಪಾರಿ ಸಂಘಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಬೇಕು.
- ಇಡೀ ಪ್ರಕ್ರಿಯೆಯು ಕಾನೂನಾತ್ಮಕ, ನ್ಯಾಯಯುತ ಮತ್ತು ಮಾನವೀಯತೆಯಿಂದ ಕೂಡಿರಬೇಕು.




