bengaluruಕ್ರಿಕೆಟ್ರಾಜ್ಯಸುದ್ದಿ

ಆರ್‌ಸಿಬಿ-ಸಿಎಸ್‌ಕೆ ಬಿಗ್ ಫೈಟ್: ಅಭಿಮಾನಿಗಳಿಗೆ ಪೊಲೀಸ್ ಕಮಿಷನರ್ ವಾರ್ನಿಂಗ್..!

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ಅಭಿಮಾನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಮುಖ್ಯವಾಗಿ, ಅಧಿಕೃತ ಟಿಕೆಟ್ ಇಲ್ಲದ ಅಭಿಮಾನಿಗಳು ಕ್ರೀಡಾಂಗಣದ ಹತ್ತಿರ ಸುಳಿಯಬಾರದು ಎಂದು ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಪಂದ್ಯದ ವೇಳೆ ಸುಮಾರು 32 ಸಾವಿರ ಜನರು ಮೆಟ್ರೋ ಬಳಸಿದ್ದನ್ನು ಗಮನದಲ್ಲಿಟ್ಟುಕೊಂಡು, ನಾಳೆಯೂ ಅಭಿಮಾನಿಗಳು ಸಂಚಾರ ದಟ್ಟಣೆ ತಪ್ಪಿಸಲು ಮೆಟ್ರೋ ಮತ್ತು ಬಿಎಂಟಿಸಿ ಬಸ್‌ಗಳನ್ನೇ ಅವಲಂಬಿಸುವಂತೆ ಸಲಹೆ ನೀಡಲಾಗಿದೆ. ಅಲ್ಲದೆ, ಹಿಂದಿನ ಪಂದ್ಯದಲ್ಲಿ ಮೊಬೈಲ್ ಕಳ್ಳತನದ ದೂರುಗಳು ಹೆಚ್ಚಾಗಿದ್ದರಿಂದ, ಸಾರ್ವಜನಿಕರು ತಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೂಚಿಸಲಾಗಿದೆ. ಈಗಾಗಲೇ 71 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕೃತ್ಯದಲ್ಲಿ ಹೊರ ರಾಜ್ಯದವರ ಕೈವಾಡವಿರುವುದು ಪತ್ತೆಯಾಗಿದೆ.

Comments (0)

Your email address will not be published. Required fields are marked *

Back to top button