ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾಡಿರುವ ಅಶ್ಲೀಲ ಪದ ಬಳಕೆ ವಿರುದ್ಧ ರಾಜಕೀಯ ಮುಖಂಡರು ಹಾಗೂ ಧಾರ್ಮಿಕ ಮುಖಂಡರು ತೀವ್ರವಾಗಿ ಕಿಡಿಕಾರಿದ್ದಾರೆ.
ಲಿಂಗಾಯತ ಪಂಚಮಸಾಲಿ ಮುಖಂಡರಾದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಮಾತನಾಡಿ, ರವಿಯವರ ಮಾತುಗಳು ಬಿಜೆಪಿ ಬೆಳೆಸಿದ ವಿಷ ಸಂಸ್ಕೃತಿಯಾಗಿದೆ. ನಾವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದೇ ಜನಸೇವೆಗಾಗಿಯೇ ಹೊರತು ಅಗ್ಗದ ವಾಕ್ಚಾತುರ್ಯಕ್ಕಾಗಿ ಅಲ್ಲ ಎಂದು ತಿಳಿಸಿದರು.
ಮಾಜಿ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಮಹಿಳೆಯರ ಬಗ್ಗೆ ಸಿ.ಟಿ.ರವಿ ಅವರ ನಡವಳಿಕೆ ಮತ್ತು ಹೇಳಿಕೆಗಳು ಬಿಜೆಪಿಗೆ ಸರಿ ಎನಿಸುತ್ತಿದೆಯೇ? ಬಿಜೆಪಿ ನಾಯಕರು ಸಂಸ್ಕೃತಿಯ ಬಗ್ಗೆ ಬೋಧಿಸುತ್ತಿರುತ್ತಾರೆ. ಇದೀಗ ಆ ಸಂಸ್ಕೃತಿ ಎಲ್ಲಿ ಹೋಯಿತು? ಇದೇನಾ ಆರ್ ಎಸ್ ಎಸ್ ಪ್ರತಿಪಾದಿಸುವ ಸಂಸ್ಕೃತಿ? ಬಿಜೆಪಿ ನಾಯಕರಲ್ಲಿ ಮೌಲ್ಯಗಳನ್ನು ಬಿತ್ತಬೇಕಾದ ಆರೆಸ್ಸೆಸ್ ಜವಾಬ್ದಾರಿ ವಹಿಸಿ ಅವರ ಕಾರ್ಯಗಳಿಗೆ ಲಗಾಮು ಹಾಕಬೇಕು ಎಂದು ಆಗ್ರಹಿಸಿದರು.
ಕನ್ನಡಿಗರು ಸುಸಂಸ್ಕೃತರು ಎಂಬ ಭಾವನೆ ದೇಶದಲ್ಲಿದೆ. ವಿರೋಧ ಪಕ್ಷಗಳ ನಾಯಕರು ಪದೇ ಪದೆ ಮಹಿಳೆಯರ ವಿರುದ್ಧ ಧೋರಣೆ ಅನುಸರಿಸುತ್ತಿರುವುದರಿಂದ ರಾಜ್ಯದ ಗೌರವ ಕಡಿಮೆಯಾಗುವುದಿಲ್ಲವೇ? ಕಳೆದ ಹತ್ತು ವರ್ಷಗಳಿಂದ ಮಹಿಳೆಯರ ಮೇಲೆ ಬಿಜೆಪಿ ನಾಯಕರ ಉಪಟಳಗಳು ಹೆಚ್ಚಾಗಿವೆ. ಇದೆಲ್ಲವನ್ನು ನೋಡಿದಾಗ, ಮೌಲ್ಯಗಳು ಕುಸಿಯುತ್ತಿವೆ, ಓಲೈಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಜನಪ್ರತಿನಿಧಿಗಳು ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.