ತಾತನ ಕಾರಲ್ಲೇ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ್ ಶಾಮನೂರು!

ದಾವಣಗೆರೆ: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿರುವಾಗಲೇ, ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತಾಯಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿರುವ ಸಮರ್ಥ್, ತಾತನ ರಾಜಕೀಯ ಉತ್ತರಾಧಿಕಾರಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಸಮರ್ಥ್, “ನಾನು ತಾತನ ಕಾರಿನಲ್ಲೇ ಬಂದು ನಾಮಪತ್ರ ಸಲ್ಲಿಸಿದ್ದೇನೆ. ಅವರ ಕೊಠಡಿಯಲ್ಲೇ ಕುಳಿತು ಫಾರ್ಮ್ಗಳಿಗೆ ಸಹಿ ಹಾಕಿದ್ದು, ಅವರ ಸ್ಥಾನವನ್ನು ಸಮರ್ಥವಾಗಿ ತುಂಬುವ ಕೆಲಸ ಮಾಡುತ್ತೇನೆ” ಕ್ಷೇತ್ರದ ಜನರು ಅಜ್ಜನ ಮೇಲೆ ತೋರಿದ ಪ್ರೀತಿ ಮತ್ತು ಆಶೀರ್ವಾದವನ್ನು ನನಗೂ ನೀಡಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಹೇಳಿದರು.
ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, , “ಸಮರ್ಥ್ ಚಿಕ್ಕ ವಯಸ್ಸಿನಲ್ಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ್ದು, ಈಗಾಗಲೇ ತಾತನೊಂದಿಗೆ ಚುನಾವಣಾ ಕೆಲಸಗಳನ್ನು ಮಾಡಿದ ಅನುಭವ ಹೊಂದಿದ್ದಾನೆ. ಹೈಕಮಾಂಡ್ಗೆ ಟಿಕೆಟ್ಗಾಗಿ ಈಗಾಗಲೇ ಮನವಿ ಸಲ್ಲಿಸಿದ್ದೇವೆ” ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ಗಾಗಿ ಅಲ್ಪಸಂಖ್ಯಾತರು ಕೂಡ ನಾಮಪತ್ರ ಸಲ್ಲಿಸಿದ್ದು, ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೋ ಅವರೇ ಅಂತಿಮ ಅಭ್ಯರ್ಥಿ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಇಂದು ಸಂಜೆ ಅಥವಾ ನಾಳೆ ವೇಳೆಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗುವ ಸಾಧ್ಯತೆಯಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ನಾಮಪತ್ರ ಸಲ್ಲಿಸಿರುವುದು ಜಿಲ್ಲಾ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.