Friday, August 22, 2025
24.2 C
Bengaluru
Google search engine
LIVE
ಮನೆUncategorizedಸಂವಿಧಾನ ಪ್ರಜಾಪ್ರಭುತ್ವದ ಆತ್ಮ: ಯುವ ಪೀಳಿಗೆ ಅರಿತು ಅರಿವು ಮೂಡಿಸಬೇಕು

ಸಂವಿಧಾನ ಪ್ರಜಾಪ್ರಭುತ್ವದ ಆತ್ಮ: ಯುವ ಪೀಳಿಗೆ ಅರಿತು ಅರಿವು ಮೂಡಿಸಬೇಕು

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.

ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. `ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ’ ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ದೇಶದಲ್ಲಿ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ.

ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಗೌರವ ಮತ್ತು ಅದರ ಆಶಯಗಳ ಬಗ್ಗೆ ಬದ್ಧತೆ ಇರಲೇಬೇಕು. ಸಂವಿಧಾನೇತರ ಶಕ್ತಿಗಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗ ಇಲ್ಲ. ಸಂವಿಧಾನದ ಬಗ್ಗೆ ಭಿನ್ನಾಭಿಪ್ರಾಯ ಇಟ್ಟುಕೊಂಡು ಸಂಸದೀಯ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ಇದು ಸಂವಿಧಾನಕ್ಕೆ ಮಾಡುವ ಅಪಚಾರ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಕೂಡಾ ಹೌದು. ಇಂತಹವರನ್ನು ತಿರಸ್ಕರಿಸುವುದು ಪ್ರತಿಯೊಬ್ಬ ಪ್ರಜೆಯ ಧರ್ಮವಾಗಿದೆ.

ಜಾತ್ಯತೀತತೆ ಸಂವಿಧಾನದ ಮುಖ್ಯ ಆಶಯಗಳಲ್ಲಿ ಒಂದು. ಇದು ಅನ್ಯಧರ್ಮವನ್ನು ದ್ವೇಷಿಸದೆ ಸ್ವಂತ ಧರ್ಮವನ್ನು ಪ್ರೀತಿಸುವ ಉದಾತ್ತ ಮಾನವೀಯ ಗುಣ. ಜಾತಿ, ಧರ್ಮವನ್ನು ಮೀರಿ ಮನುಷ್ಯ ಜಾತಿ ತಾನೊಂದೆ ವಲಂ ಎಂಬ ಕವಿವಾಣಿ ಕೂಡಾ ಸಂವಿಧಾನದ ಈ ಆಶಯವನ್ನೇ ನೆನಪು ಮಾಡಿಕೊಡುತ್ತದೆ.

ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹುಧರ್ಮ, ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದ್ದದ್ದು. ಸ್ವಾತಂತ್ರ್ಯ ಎನ್ನುವುದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುದ್ದಲ್ಲ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಾಕ್ಷಾತ್ಕಾರಗೊಂಡಾಗ ಮಾತ್ರ ಪ್ರಜಾಪ್ರಭುತ್ವ. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ಪ್ರಜಾಪ್ರಭುತ್ವ ಎಂದು ಹೇಳಿದ್ದು. ಸಂವಿಧಾನದ ಈ ಆಶಯವನ್ನು ಸಾಕಾರಗೊಳಿಸುವುದು ಪ್ರತಿ ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ.

ಅದ್ರಲ್ಲೂ ನಮ್ಮ ರಾಜ್ಯದ ಯೋಚನೆಗಳು ಮತ್ತು ಯೋಜನೆಗಳು ಸಂವಿಧಾನದ ಆಶಯಗಳನ್ನ ಉಳಿಸಿಕೊಂಡು ಸಾಗುತ್ತಿದೆ. ಇನ್ನು ಆಡಳಿತದ ವಿಚಾರವಾಗಿ ’ಕರ್ನಾಟಕ ಮಾದರಿ’ ಬಗ್ಗೆ ಇಡೀ ದೇಶ ಮಾತ್ರ ಅಲ್ಲ ವಿಶ್ವ ಶ್ರೇಷ್ಠ ಆರ್ಥಿಕ ತಜ್ಞರು ಕೂಡಾ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಕನ್ನಡಿಗರೆಲ್ಲರಿಗೂ ಅಭಿಮಾನದ ಸಂಗತಿಯಾಗಿದೆ. ಸಂವಿಧಾನ ಮೂಲ ಆಶಯಗಳನ್ನ ಅರಿತು, ಸಂವಿಧಾನದ ಅರಿವು ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯವೇ ಆಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments