ಕ್ರೈಂ ಸ್ಟೋರಿದೇಶ/ವಿದೇಶಸುದ್ದಿ

ಬಿಹಾರದಲ್ಲಿ ಕಾಮುಕರ ಅಟ್ಟಹಾಸ; 6 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ

ಬಿಹಾರ: ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗಾ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇತರ ಮಕ್ಕಳೊಂದಿಗೆ ಕೊಳದ ಬಳಿ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಳು, ನಂತರ ಆಕೆಯ ಮೃತದೇಹವು ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ.

ಬಾಲಕಿಯ ನೆರೆಹೊರೆಯವರೇ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ನೆರೆಹೊರೆಯವರನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಗುನಾಥ್ ರೆಡ್ಡಿ ತಿಳಿಸಿದ್ದಾರೆ. ಸದ್ಯ ಶವವನ್ನು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ಬಿಹಾರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಮಿತಿಮೀರುತ್ತಿವೆ ಎಂಬುದಕ್ಕೆ ಇತ್ತೀಚಿನ ಘಟನೆಗಳೇ ಸಾಕ್ಷಿ. ಕಳೆದ ತಿಂಗಳು ಪೂರ್ಣಿಯಾ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಷ್ಟೇ ಅಲ್ಲದೆ, ನೀಟ್ ವಿದ್ಯಾರ್ಥಿನಿಯೊಬ್ಬಳ ನಿಗೂಢ ಸಾವು ಕೂಡ ಲೈಂಗಿಕ ದೌರ್ಜನ್ಯದ ಶಂಕೆ ಮೂಡಿಸಿತ್ತು. ಸಾಲು ಸಾಲು ಘಟನೆಗಳು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡಿದ್ದು, ಸಾರ್ವಜನಿಕರು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button