Top Newsರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಸರ್ಕಾರ ಐಸಿಯುನಲ್ಲಿದೆ! ಆರ್. ಅಶೋಕ್ ಕಿಡಿ

ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುಡುಗಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ ಅವರು, ರಾಜ್ಯದಲ್ಲಿ 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. 65 ಸಾವಿರ ಹುದ್ದೆ ಭರ್ತಿಗೆ ಆದೇಶ ಹೊರಡಿಸಿ 6 ತಿಂಗಳು ಕಳೆದರೂ ಒಂದೇ ಒಂದು ನೇಮಕಾತಿ ನಡೆದಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಸಂಬಳ ಕೊಡಲು ಹಣವಿಲ್ಲದಂತಾಗಿದ್ದು, ರಾಜ್ಯವನ್ನು ಐಸಿಯುನಲ್ಲಿ ಇಟ್ಟಿದ್ದಾರೆ ಎಂದು ಟೀಕಿಸಿದರು. ಸಿಎಂಗೆ ಐದು ವರ್ಷ ಕೆಲಸ ಬೇಕು, ಡಿಸಿಎಂಗೆ ಸಿಎಂ ಉದ್ಯೋಗ ಬೇಕು, ಆದರೆ ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಯಾರಿಗೂ ಕಾಳಜಿಯಿಲ್ಲ ಎಂದು ವ್ಯಂಗ್ಯವಾಡಿದರು.

ದಲಿತ ಮುಖ್ಯಮಂತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕ್, ದಲಿತರ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರಿಗೆ ಧೈರ್ಯವಿದ್ದರೆ ಕೂಡಲೇ ದಲಿತರನ್ನು ಸಿಎಂ ಮಾಡಲಿ ಎಂದು ಸವಾಲು ಹಾಕಿದರು. ಸಿದ್ದರಾಮಯ್ಯ ಅವರು ಇದುವರೆಗೆ ಯಾವ ಸಿಎಂ ಮಾಡದ ರೀತಿ ಜಾತಿ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ. ಹೈಕಮಾಂಡ್‌ನಿಂದ ಮನೆ ಖಾಲಿ ಮಾಡುವ ಸಂದೇಶ ಬಂದಿರಬೇಕು, ಅದಕ್ಕೇ ಈ ರೀತಿ ನಾಟಕ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇನ್ನು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನ ಸಿಗದೆ ಸುಸ್ತಾಗಿ ವಿದೇಶಿ ಪ್ರವಾಸಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಅತಿ ಹೆಚ್ಚು ಸಾಲ ಮಾಡಿರುವ ಮುಖ್ಯಮಂತ್ರಿಯಾಗಿದ್ದು, ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆಗೆ ಆಗ್ರಹಿಸಿದರು.

ಲೋಕಾಯುಕ್ತ ದಾಳಿ ಹಾಗೂ ಭ್ರಷ್ಟಾಚಾರದ ಆರೋಪಗಳ ಕುರಿತು ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ, ಆದರೆ ಕಾಂಗ್ರೆಸ್ ತನ್ನ ತಟ್ಟೆಯಲ್ಲಿ ಹೆಗ್ಗಣ ಇಟ್ಟುಕೊಂಡು ಬೇರೆಯವರ ತಟ್ಟೆ ನೋಡುತ್ತಿದೆ ಎಂದು ತಿರುಗೇಟು ನೀಡಿದರು. ಕೊಲೆ ಪ್ರಕರಣದಲ್ಲಿರುವ ಕಾಂಗ್ರೆಸ್ ಶಾಸಕರು ಹಾಗೂ ಹವಾಲ ಹಣದ ಆರೋಪ ಹೊತ್ತವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೇಜವಾಬ್ದಾರಿ ಪ್ರದರ್ಶಿಸಿದೆ ಎಂದು ದೂರಿದ ಅವರು, ಸಿದ್ದರಾಮಯ್ಯ ಜಿಎಸ್‌ಟಿ ಸಭೆಗೂ ಹೋಗದೆ ಎಡಬಿಡಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾತನಾಡಿದ ಅಶೋಕ್, ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ ಎಂದರು. ರಾಜ್ಯದಲ್ಲಿ ಈಗ ಬಿಜೆಪಿ ಪರ ಅಲೆ ಇದ್ದು, ಜಿಪಂ, ತಾಪಂ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಸುಲಭವಾಗಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಹಂಚಿಕೆಯ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಿಮ ತೀರ್ಮಾನವಾಗಲಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

Comments (0)

Your email address will not be published. Required fields are marked *

Back to top button