ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ ಡಿ.ಕೆ ಶಿವಕುಮಾರ್ ಬಣ ಮತ್ತೊಂದು ಕಡೆ ಇದೆ.
ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ಪರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.. ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ತಲೆ ಮೇಲೆ ಕೈ ಇಟ್ಟು 30 ತಿಂಗಳ ನಂತರ ಅಧಿಕಾರ ಬಿಟ್ಟುಕೊಡುತ್ತೇನೆ ಎಂದು ಹೇಳಿರುವ ಸಿದ್ದರಾಮಯ್ಯನವರೇ ಕೊಟ್ಟ ಮಾತಿನಂತೆ ನಡೆದುಕೊಳ್ಳಿ ವಚನ ಭ್ರಷ್ಟರಾಗಬೇಡಿ ಎಂದು ಹೇಳಿದ್ದಾರೆ..
ಜಲದರ್ಶಿನಿ ಅಥಿತಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯ ಕರ್ನಾಟಕ ಭವನದಲ್ಲಿ ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲೇ ಸಿದ್ಧರಾಮಯ್ಯ ಅವರು, ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ತಲೆ ಮೇಲೆ ಕೈ ಇಟ್ಟು 30 ತಿಂಗಳ ನಂತರ ಅಧಿಕಾರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಇದು ಎಲ್ಲರಿಗೂ ಗೊತ್ತು. ಯಾರು ಮಾತನಾಡುತ್ತಿಲ್ಲ ಅಷ್ಟೇ? ನಿಮ್ಮ ಮತ್ತು ಸಿದ್ದರಾಮಯ್ಯ ನಡುವಿನ ಒಪ್ಪಂದವನ್ನು ಈಗಲಾದರೂ ಡಿ.ಕೆ.ಶಿವಕುಮಾರ್ ರಾಜ್ಯದ ಜನರಿಗೆ ಹೇಳಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಪಕ್ಷದಲ್ಲಿದ್ದ ಸಿದ್ಧರಾಮಯ್ಯ ಧರಂ ಸಿಂಗ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಆಗ ಎಚ್.ಡಿ.ದೇವೇಗೌಡರು, ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತು ಹಾಕಿದರು. ಆಗ ಆಶ್ರಯ ನೀಡಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಮರೆಯಬೇಡಿ ಸಿದ್ದರಾಮಯ್ಯನವರೆ. ಕಾಂಗ್ರೆಸ್ ಪಕ್ಷ ನಿಮ್ಮನ್ನು ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಬೇಡಿ ಎಂದು ಹೇಳಿದರು.
ರಾಜ್ಯದ ಜನ ಸಿದ್ದರಾಮಯ್ಯ ನೋಡಿ 136 ಸ್ಥಾನ ಕೊಟ್ಟಿಲ್ಲ ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿರುವುದು. ಒಪ್ಪಂದದಂತೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಬೇಕು, ಕಾಂಗ್ರೆಸ್ ಹೈ ಕಮಾಂಡ್ ಬಲಿಷ್ಠವಾಗಿದೆ. ಅವರಾದರೂ ಮುಂದೆ ಬಂದು ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಕೊಡಬೇಕು ಎಂದು ಆಗ್ರಹಿಸಿದರು.


