20 ದಿನಗಳ ಉಪವಾಸ – ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್!
20 days of fasting - Sonam Wangchuk shifted to hospital!

ನವದೆಹಲಿ : ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಹೈಕೋರ್ಟ್ ಆದೇಶ ಹಾಗೂ ವೈದ್ಯರ ತುರ್ತು ಸಲಹೆಯ ಮೇರೆಗೆ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ವಾಂಗ್ಚುಕ್ ಅವರು ಕಳೆದೆರಡು ವಾರಗಳಿಂದ ಉಪವಾಸ ಕೂತಿದ್ದರು.
ವಾಂಗ್ಚುಕ್ ಅವರ ದೈನಂದಿನ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ಉಚ್ಚ ನ್ಯಾಯಾಲಯವು ಎರಡು ದಿನಗಳ ಹಿಂದೆಯಷ್ಟೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿತ್ತು. ಅದರಂತೆ ಶುಕ್ರವಾರ ವಾಂಗ್ಚುಕ್ ಅವರನ್ನು ಪರೀಕ್ಷಿಸಿದ ತಜ್ಞ ವೈದ್ಯರ ತಂಡ, ದೀರ್ಘಾವಧಿಯ ಉಪವಾಸದಿಂದಾಗಿ ಅವರ ದೇಹದ ಪ್ರಮುಖ ಅಂಗಾಂಗಗಳು ವಿಫಲಗೊಳ್ಳುವ ಸಾಧ್ಯತೆ ಇದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿತ್ತು. ವೈದ್ಯರ ಈ ತುರ್ತು ವೈದ್ಯಕೀಯ ವರದಿಯ ಆಧಾರದ ಮೇಲೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಪೊಲೀಸರು ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದಾಗ ಜಂತರ್ ಮಂತರ್‌ನಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಗೌರವಾನ್ವಿತ ಹೈಕೋರ್ಟ್‌ನ ಆದೇಶಗಳನ್ನು ಪಾಲಿಸುವಾಗ ಅಲ್ಲಿದ್ದ ಪ್ರತಿಭಟನಾಕಾರರು ಪೊಲೀಸರ ಕಾರ್ಯಾಚರಣೆಗೆ ಅಡಚಣೆ ಉಂಟುಮಾಡಲು ಪ್ರಯತ್ನಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಭಾರಿ ಗದ್ದಲ, ತಳ್ಳಾಟ-ನೂಕಾಟ ಸಂಭವಿಸಿತು. ಆದಾಗ್ಯೂ, ಪೊಲೀಸರು ವಾಂಗ್ಚುಕ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.




