ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನ ಗೊಳಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು .
ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯಲ್ಲಿ ಇರುವ ತೊಡಕುಗಳನ್ನು ನಿವಾರಿಸಿ ಆದಷ್ಟು ಬೇಗ ಈ ಯೋಜನೆಯನ್ನು ಅನುಷ್ಠಾನ ಗೊಳಿಸುವುದಾಗಿ ಭರವಸೆ ನೀಡಿದರು.
ಟಿ.ಬಿ ಜಯಚಂದ್ರ ಅವರು ಮಾತನಾಡು ಶಿರಾ ತಾಲೂಕಿನ 200 ಕೆರೆಗಳಿಗೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ಹರಿಸಲು ಯೋಜನೆ ರೂಪಿಸಲಾಗಿದ್ದು ಕಾಮಗಾರಿ ಕುಂಟುತ್ತಾ ಸಾಗಿದೆ ಎಂದು ಗಮನ ಸೆಳೆದರು.
“ಈಗಾಗಲೇ ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಶಿರಾ ಹಾಗೂ ಮಧುಗಿರಿ ತಾಲೂಕುಗಳ ಅಂತರ್ಜಲ ಅಭಿವೃದ್ಧಿಗೆ 4.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಶಿರಾ ತಾಲೂಕಿನ ಕೆರೆಗಳಲ್ಲಿ ಮಳೆ ನೀರು ಶೇಖರಣೆ ಕಷ್ಟವಾಗಿದ್ದು, ಈ ಭಾಗದ ಅಂತರ್ಜಲ ಮಟ್ಟ ಕುಸಿದಿದೆ. ಈ ಭಾಗದ ಜನ ಫ್ಲೋರೈಡ್ ಗಳಿಂದ ಕೂಡಿದ ನೀರನ್ನು ಕುಡಿಯುವಂತಾಗಿದೆ ಎಂದು ಜಯಚಂದ್ರ ಅವರು ಸರ್ಕಾರದ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯ ಶಾಸಕರಾದ ಜಯಚಂದ್ರ ಅವರ ಜೊತೆ ಚರ್ಚೆ ಮಾಡಿ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಎತ್ತಿನಹೊಳೆ ಯೋಜನೆ ನಮ್ಮ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ಅದಷ್ಟು ಬೇಗ ಅದನ್ನು ಪೂರ್ಣಗೊಳಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.