ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ರಾಜ್ಯದ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಏತನ್ಮಧ್ಯೆ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ಡಿ. ದೇವರಾಜ ಅರಸು ಸೇರಿದಂತೆ ಹಲವು ಗಣ್ಯಮಾನ್ಯರ ಹೆಸರನ್ನ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.


