ಮಂಡ್ಯ: ಗಣೇಶ ವಿಸರ್ಜನೆಯ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ರೌಂಡ್ ಹಾಕಿದರು.
ಈ ವಿಚಾರವಾಗಿ ಇಂದು ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ತಮಿಳುನಾಡು ಕಾಲನಿಯಿಂದ ಹೊರಟ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು, ಕರೆಂಟ್ ಕೂಡ ಆಫ್ ಆಯಿತು ಎಂದು ವರದಿಯಾಗಿದೆ ಎಂದಿದ್ದಾರೆ.
ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, 21 ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.