ಬೀದರ್ : ಹುಮ್ನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಘಟನೆ ಸ್ಥಳದಲ್ಲಿ ಭೀತಿಯ ವಾತಾವರಣ ನಿರ್ಮಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆಯವರು ಸ್ಥಳಕ್ಕೆ ತಕ್ಷಣ ಭೇಟಿ ನೀಡುವುದಾಗಿ ಸೂಚಿಸಿ ಸಮಗ್ರ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಹಾಗೂ ಚಿಕಿತ್ಸಾ ವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸೂಚನೆ ಹೊರಡಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಮಾದರಿ ಸಂಗ್ರಹ ಮಾಡಿಸಲು ಸೂಚಿಸಲಾಗಿದೆ. ಸ್ಫೋಟಕ್ಕೆ ಕಾರಣವಾದ ವಸ್ತು ಯಾವುದು?ಆ ವಸ್ತು ಸ್ಥಳಕ್ಕೆ ಹೇಗೆ ಬಂದಿದೆ? ಎಂಬ ವಿಚಾರ ತನಿಖೆಯಲ್ಲಿ ಸ್ಪಷ್ಟಪಡಿಸಬೇಕಾಗಿದೆ. ಸ್ಫೋಟಕ್ಕೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಸೂಚಿಸಿದ್ದಾರೆ. ಸ್ಥಳೀಯ ಜನತೆ ಮತ್ತು ಶಾಲಾ ಮಕ್ಕಳ ಭದ್ರತೆಗೆ ಹೆಚ್ಚಿನ ಪೋಲೀಸ್ ಜಾಗೃತಿ ಮತ್ತು ಪರಿಸರ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ.


