ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ
ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ
ಜನರು ಸಂವಿಧಾನಗಳ ಆಶಯಗಳನ್ನರಿಯಲು ಅವಕಾಶ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 8 : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು.
ಆಗಸ್ಟ್ 8 ರಿಂದ 19 ವರೆಗೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ
ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ ಎಂದರು.
ಫಲಪುಷ್ಪ ಪ್ರದರ್ಶನಕ್ಕೆ 12 ಲಕ್ಷ ಜನ ಆಗಮಿಸುವ ನಿರೀಕ್ಷೆ
ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದರು.