ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ವರದಿಯಾಗಿದೆ. ಈ ಪೈಕಿ ಪ್ರಾಥಮಿಕ ಶಾಲೆಗಳಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ಅಲ್ಲದೆ, 6,158 ಶಾಲೆಗಳು ಕೇವಲ ಒಬ್ಬ ಶಿಕ್ಷಕರಿಂದ ನಿರ್ವಹಿಸಲ್ಪಡುತ್ತಿವೆ ಎಂಬುದು ತಿಳಿದುಬಂದಿದೆ.ರಾಜ್ಯದಲ್ಲಿ ವ್ಯಾಪಕ ಶಿಕ್ಷಕರ ಕೊರತೆ ಇದೆ. ಜತೆಗೆ, ಸೌಲಭ್ಯಗಳ ಕೊರತೆಗಳಿಂದಾಗಿ ಇರುವ ಶಿಕ್ಷಕರನ್ನೂ ಆಕರ್ಷಿಸಲು ಸರ್ಕಾರ ವಿಫಲವಾಗಿದೆ.
ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇರಳ ಮಾದರಿಯನ್ನು ಕರ್ನಾಟಕ ಅನುಸರಿಸಬೇಕು ಎಂದು ತಜ್ಞರು ಸಲಹೆ ನೀಡಿರುವುದಾಗಿಯೂ ವರದಿ ಉಲ್ಲೇಖಿಸಿದೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಐದು ವರ್ಷಗಳಲ್ಲಿ 10,000 ಕೋಟಿ ರೂ.ಗಳನ್ನು ಕೇರಳ ಸರ್ಕಾರ ಮೀಸಲಿಟ್ಟಿದೆ ಎಂದು ತಜ್ಞರು ತಿಳಿಸಿದ್ದಾರೆ. ಶಿಕ್ಷಕರ ಕೊರತೆಯು ಶಿಕ್ಷಣದ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 35 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ ಕಡ್ಡಾಯವಾಗಿರಬೇಕು ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ 50,067 ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿಯಿವೆ. 2028-29ರ ವೇಳೆಗೆ 34,807ಕ್ಕೂ ಹೆಚ್ಚು ಶಿಕ್ಷಕರು ನಿವೃತ್ತರಾಗಲಿದ್ದಾರೆ. ಆಗ ಕೊರತೆ ಮತ್ತಷ್ಟು ಹೆಚ್ಚಾಗಲಿದೆ. ಇಂಥ ಸ್ಥಿತಿಯಲ್ಲಿ ನಾವು ಗುಣಮಟ್ಟದ ಶಿಕ್ಷಣವನ್ನು ಕಾಪಾಡಿಕೊಳ್ಳುವುದು ಹೇಗೆ ಎಂದು ಶಿಕ್ಷಣತಜ್ಞ ನಿರಂಜನಾರಾಧ್ಯ ವಿಪಿ ಪ್ರಶ್ನಿಸಿರುವುದಾಗಿ ವರದಿ ಉಲ್ಲೇಖಿಸಿದೆ.
ಖಾಲಿಯಾಗಲಿವೆ 80 ಸಾವಿರ ಹುದ್ದೆ
ತಕ್ಷಣದ ಕ್ರಮ ಕೈಗೊಳ್ಳದಿದ್ದರೆ, ಶಿಕ್ಷಣ ವ್ಯವಸ್ಥೆಯು 80,000 ದಷ್ಟು ಶಿಕ್ಷಕರ ಹುದ್ದೆ ಖಾಲಿಯಾಗುವ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಪರಿಣಾಮವಾಗಿ ರಾಜ್ಯಾದ್ಯಂತ ಶಾಲೆಗಳು ದುರ್ಬಲವಾಗಲಿವೆ ಎಂದು ಅವರು ಹೇಳಿದ್ದಾರೆ.
ಕೊರತೆಯನ್ನು ನೀಗಿಸಲು ಸದ್ಯ ಇಲಾಖೆಯು 45,000 ಅತಿಥಿ ಶಿಕ್ಷಕರನ್ನು ಆಶ್ರಯಿಸಿದೆ. ಅವರಲ್ಲಿ ಸುಮಾರು 35,000 ಪ್ರಾಥಮಿಕ ಹಂತದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಕರ ತೀವ್ರ ಕೊರತೆ ಇರುವ ಬಗ್ಗೆ ಕೆಲವು ದಿನಗಳ ಹಿಂದಷ್ಟೇ ವರದಿಯಾಗಿತ್ತು. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯ ವರೆಗಿನ ಸುಮಾರು 22 ಲಕ್ಷ ವಿದ್ಯಾರ್ಥಿಗಳಿಗೆ ಕೇವಲ 8,895 ವಿಜ್ಞಾನ ಮತ್ತು ಗಣಿತ ಶಿಕ್ಷಕರಿದ್ದಾರೆ ಎಂಬುದು ಅಂಕಿಅಂಶಗಳಿಂದ ತಿಳಿದುಬಂದಿತ್ತು.