ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ವಸತಿ ಇಲಾಖೆಯ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು ಮೂವರು ಗಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಗಾಯಗೊಂಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ ಸಿಎಂ, ಅಗತ್ಯ ನೆರವಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನೂತನ ಮನೆಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕಾಗಿ ಕಟೌಟ್ ಅಳವಡಿಸುತ್ತಿದ್ದ ಸಂದರ್ಭದಲ್ಲಿ ಅದು ಆಕಸ್ಮಿಕವಾಗಿ ಜನರ ಮೇಲೆ ಬಿದ್ದಿದೆ. ಬ್ಯಾಹಟ್ಟಿಯ ಶಂಕರ ಹಡಪದ, ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ ಮತ್ತು ಧಾರವಾಡದ ಲಕ್ಷ್ಮಿನಗರದ ಮಂಜುನಾಥ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ನಗರದ ಸುಚಿರಾಯು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆ ಹಂಚಿಕೆ ಕಾರ್ಯಕ್ರಮ ಮುಗಿದ ತಕ್ಷಣ ಮುಖ್ಯಮಂತ್ರಿಗಳು ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಜೊತೆ ಮಾತನಾಡಿ ಧೈರ್ಯ ತುಂಬಿದ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಸರ್ಕಾರದಿಂದಲೇ ಉಚಿತ ಚಿಕಿತ್ಸೆ ಮತ್ತು ಔಷಧಿಯನ್ನು ಒದಗಿಸಬೇಕು,” ಎಂದು ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಡಾ. ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ ಸೇರಿದಂತೆ ಪ್ರಮುಖ ಶಾಸಕರು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.


