ಗದಗ: ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ ನಡುವೆ ಉಂಟಾದ ಈ ಸರಣಿ ಡಿಕ್ಕಿಯ ರಭಸಕ್ಕೆ ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48) ಹಾಗೂ ಮರಿಯಂಬೂ ಹುನಗುಂದ (55) ಎಂಬುವವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಹಿಳೆಯರೆಲ್ಲರೂ ರೋಣ ಭಾಗದ ಹೊಲಗಳಿಗೆ ಕಡಲೆ ಕೀಳುವ ಕೆಲಸಕ್ಕಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕ್ರೂಸರ್‌ನಲ್ಲಿದ್ದ ಇತರ ಪ್ರಯಾಣಿಕರಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ. ಆಸ್ಪತ್ರೆಯ ಆವರಣದಲ್ಲಿ ಮೃತರ ಸಂಬಂಧಿಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.
ಘಟನಾ ಸ್ಥಳಕ್ಕೆ ರೋಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಂಚಾರ ನಿಯಮಗಳ ಉಲ್ಲಂಘನೆಯೇ ಈ ಅವಘಡಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಮುಂಜಾನೆ ದಟ್ಟವಾಗಿ ಆವರಿಸಿದ್ದ ಮಂಜು ಕೂಡ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.


