ರಾಜ್ಯದ ಬೈ ಎಲೆಕ್ಷನ್‌ಗೆ ಮುಹೂರ್ತ ಫಿಕ್ಸ್; ಏ. 9ಕ್ಕೆ ವೋಟಿಂಗ್!

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಇಂದು ದಿನಾಂಕ ಘೋಷಣೆಯಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ. 4ರಂದು ಫಲಿತಾಂಶ ಹೊರಬೀಳಲಿದೆ.
ಬಾಗಲಕೋಟೆಯ ಎಚ್. ವೈ ಮೇಟಿ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೊಂಡಿದೆ.
ಉಭಯ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ. ದಾವಣಗೆರೆ ದಕ್ಷಿಣಕ್ಕೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುವುದು ಕಾಂಗ್ರೆಸ್ ಮುಸ್ಲಿಂ ಮುಖಂಡರ ಬೇಡಿಕೆಯಾಗಿದೆ. ಆದರೆ ಇದಕ್ಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ವಿರೋಧ ಇದೆ. ಇನ್ನು ಬಿಜೆಪಿಯಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪೈಪೋಟಿ ಇದೆ. ಜಿಎಸ್ ಸಿದ್ದೇಶ್ವರ ಮತ್ತು ಎಂಪಿ ರೇಣುಕಾಚಾರ್ಯ ಬಣಗಳ ನಡುವೆ ಟಿಕೆಟ್ ಗಾಗಿ ಪೈಪೋಟಿ ಇದೆ. ಈ ಭಿನ್ನಮತದ ಹಿನ್ನೆಲೆಯಲ್ಲಿ ಪ್ರತ್ಯೇಕ ಸಭೆಗಳು ನಡೆದಿವೆ. ಭಿನ್ನಮತ ಶಮನ ಮಾಡುವ ನಿಟ್ಟಿನಲ್ಲಿ ಜಿಲ್ಲೆಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಭೇಟಿ ನೀಡಿ ಮಾತುಕತೆ ನಡೆಸಿದ್ದರು.
ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಚುನಾವಣೆ ಘೋಷಣೆಗೂ ಮುನ್ನವೇ ಟಿಕೆಟ್ ಫೈಟ್ ತಲೆನೋವಾಗಿದೆ. ಹೀಗಾಗಿ ಕೈ-ಕಮಲ ನಾಯಕರು ಏನು ಕ್ರಮ ಕೈಗೊಳ್ಳುತ್ತಾರೆ ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ.
ದಾವಣಗೆರೆಯಲ್ಲಿ ಕಾಂಗ್ರೆಸ್ನಲ್ಲಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ನಾಯಕರ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಬಾರಿ ಟಿಕೆಟ್ ನಮಗೆ ಕೊಡಬೇಕು ಎಂದು ಮುಸ್ಲಿಂ ಆಕಾಂಕ್ಷಿಗಳು ಒತ್ತಾಯಿಸುತ್ತಿದ್ದಾರೆ. ಆದರೆ ಸಮರ್ಥ್ ಅವರನ್ನು ಕಣಕ್ಕಿಳಿಸುವುದು ಎಸ್ ಎಸ್ ಮಲ್ಲಿಕಾರ್ಜುನ ತಂತ್ರಗಾರಿಕೆಯಾಗಿದೆ. ಹೀಗಾಗಿ ಗೊಂದಲ ಸೃಷ್ಟಿಯಾಗಿದೆ.




