ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗ ನಡೆಸುವ ಚುನಾವಣಾಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ಜಾರಿಗೆ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ಸೂಕ್ತ ಶಿಫಾರಸ್ಸು ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ..
ಸಭೆಯ ಬಳಿಕ ಮಾತನಾಡಿದ ಸಚಿವ HK ಪಾಟೀಲ್ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಹಾಗೂ ಅಗತ್ಯ ಕಾನೂನು ತಿದ್ದುಪಡಿ ತರಲು, ನಿಯಮಾವಳಿ ರಚನೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯ ಕಾನೂನು ತಿದ್ದುಪಡಿ ಮಾಡಬೇಕು. ನಿಯಮಾವಳಿಗಳಿಗೂ ಕೆಲವು ತಿದ್ದುಪಡಿ ಮಾಡಬೇಕಾಗುತ್ತದೆ. ಅಗತ್ಯ ಕಾನೂನು ಮಾಡಲು ಕ್ಯಾಬಿನೆಟ್ ಶಿಫಾರಸು ಮಾಡಿದೆ. ಮೊದಲ ಹಂತದಲ್ಲಿ ಮತಯಂತ್ರದ ಬದಲು ಮತಪತ್ರ ತರುವಂತೆ ಚುನಾವಣಾ ಆಯೋಗಕ್ಕೆ ಸರ್ಕಾರದ ಶಿಫಾರಸು ಮಾಡಿದೆ ಎಂದು ಸಚಿವ ಹೆಚ್. ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.