ಕಲಬುರಗಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಂಚೋಳಿ ತಾಲೂಕಿನ ಕನಕಪುರ- ಗಾರಂಪಳ್ಳಿ ರಸ್ತೆ ಮಧ್ಯೆ ಮರ ಬಿದ್ದಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ಚಿಂಚೋಳಿ- ಹುಮನಾಬಾದ್ ರಾಜ್ಯ ಹೆದ್ದಾರಿ ರಸ್ತೆ ಸಂಚಾರ ಬಂದ್ ಆಗಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚಿಂಚೋಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಭಾರಿ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲದೇ ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾನಿಯಾಗಿದೆ.
ಇನ್ನು ಅಫಜಲಪೂರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಅರ್ಮಜಾ ನದಿ ಮೈದುಂಬಿ ಹರಿಯುತ್ತಿದೆ. ದಣ್ಣೂರ ಗ್ರಾಮದ ಬಳಿ ಸೇತುವೆ ಮೇಲೆ ನೀರು ಹರಿಯುತ್ತಿದ್ದು,ದಣ್ಣೂರ -ಮದರಾ ಬಿ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದೆ. ಹಾಗೂ ಅಕ್ಕಪಕ್ಕದ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಕೂಡ ಹಾನಿಯಾಗಿದೆ.