ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಸೋತಿದ್ದೇವೆ ಹೊರತು ಸತ್ತಿಲ್ಲ ಎಂದು ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪರಾಜಿತ ಅಭ್ಯರ್ಥಿ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್, ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಚುನಾವಣಾ ಪ್ರಚಾರದ ವೇಳೆ ಕೊಟ್ಟಿರುವ ಭರವಸೆಗಳನ್ನು ಕೂಡಲೇ ಈಡೇರಿಸಬೇಕು. ಅದನ್ನು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರದ ಮಾತು. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ನಾನು ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ದುಡಿಯುತ್ತೇನೆ.
ಕಾಂಗ್ರೆಸ್ ನಾಯಕರ ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ನಾವು ಬಗ್ಗಲ್ಲ. ವಿರೋಧ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ನಡೆ ಒಳ್ಳೆಯದಲ್ಲ. ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ. ಆಡಳಿತಯಂತ್ರವನ್ನು ದುರುಪಯೋಗ ಪಡಿಸಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ನಿಖಿಲ್ ಎಚ್ಚರಿಕೆ ನೀಡಿದ್ದಾರೆ.